ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ರಾಜೀನಾಮೆ ಬಳಿಕ ಬಿಡುಗಡೆ ಮಾಡಿದ ಭಾವನಾತ್ಮಕ ಸಂದೇಶದಲ್ಲಿ, “ಹಳ್ಳಿಗಾಡಿನಲ್ಲಿ ಹುಟ್ಟಿ ಬೆಳೆದ ನಾನು ಒಂದು ದಿನ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸೂ ಕಂಡಿರಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವೇ ಈ ಕನಸನ್ನು ನನಸಾಗಿಸಿದೆ” ಎಂದು ತಿಳಿಸಿದ್ದಾರೆ.
ಬುದ್ಧ, ಬಸವಣ್ಣ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ತಮ್ಮ ಆದರ್ಶ ವ್ಯಕ್ತಿಗಳೆಂದು ಉಲ್ಲೇಖಿಸಿದ ಅವರು, ಕಳೆದ 48 ವರ್ಷಗಳ ರಾಜಕೀಯ ಜೀವನದಲ್ಲಿ ಬಡವರು, ಶೋಷಿತರು ಹಾಗೂ ಅವಕಾಶ ವಂಚಿತರ ಪರವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ತೃಪ್ತಿ ಇದೆ ಎಂದು ಹೇಳಿದ್ದಾರೆ.
ತಮ್ಮನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ಅವಕಾಶ ಕಲ್ಪಿಸಿದ ಪಕ್ಷದ ಶಾಸಕರು, ಸಂಪುಟ ಸಹೋದ್ಯೋಗಿಗಳು ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ತಮ್ಮ ರಾಜಕೀಯ ಬದುಕಿನುದ್ದಕ್ಕೂ ಬೆಂಬಲಿಸಿದ ಕನ್ನಡಿಗರಿಗೆ ಚಿರಋಣಿಯಾಗಿರುವುದಾಗಿ ತಿಳಿಸಿದ್ದಾರೆ.
“ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ ಸೀಮಿತವಾಗಿದ್ದು, ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಅದೇ ವೇಳೆ, “ನನ್ನ ಕೊನೆಯುಸಿರು ಇರುವವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.






